ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಈಗಾಗಲೇ ಜಿಲ್ಲೆಯಲ್ಲಿ ಕೆಲವೊಂದು ನಿರ್ಬಂಧ ಹೇರಲಾಗಿದೆ. ಜಿಲ್ಲಾಧಿಕಾರಿಯವರು ಈ ಕುರಿತು ನಿನ್ನೆಯಷ್ಟೇ ಅಧಿಕೃತ ಹೇಳಿಕೆ ಪ್ರಕಟಿಸಿದ್ದರು. ಇದಕ್ಕೆ ತದ್ವಿರುದ್ಧವಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಯಕ್ಷಗಾನ, ಕೋಲ, ನೇಮ, ಪೂಜೆ, ಪುನಸ್ಕಾರಗಳು ಮತ್ತು ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳನ್ನು ಕೋವಿಡ್ ನಿಯಮ ಪಾಲನೆಯೊಂದಿಗೆ ನಡೆಸಬಹುದೆಂದು ಹೇಳಿದ್ದಾರೆ.
ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಜಿಲ್ಲಾಧಿಕಾರಿಯವರು ಹೊರಡಿಸಿರುವ ಆದೇಶಕ್ಕೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮರು ಸ್ಪಷ್ಟನೆ ನೀಡಲು ಜಿಲ್ಲಾಧಿಕಾರಿಯವರಿಗೆ ತಿಳಿಸಿದ್ದೇನೆ. ಈಗಾಗಲೇ ಹಮ್ಮಿಕೊಂಡಿರುವ ಯಕ್ಷಗಾನ, ಕೋಲ, ನೇಮ, ಪೂಜೆ ಪುನಸ್ಕಾರ ಮತ್ತು ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳು ಕೋವಿಡ್ ನಿಯಮ ಪಾಲನೆಯೊಂದಿಗೆ ನಡೆಸಬಹುದೆಂದು ಜಿಲ್ಲಾ ಉಸ್ತುವಾರಿ ಸಚಿವರು ಸ್ಪಷ್ಟಪಡಿಸಿದ್ದಾರೆ.
ಅದು ಮಾತ್ರವಲ್ಲದೆ ಬಯಲು ಪ್ರದೇಶ, ಮೈದಾನ ಪ್ರದೇಶದಲ್ಲಿ ಕಾರ್ಯಕ್ರಮ ನಡೆಸುವ ಸಂದರ್ಭ ಗರಿಷ್ಟ 500 ಜನಕ್ಕಿಂತ ಜಾಸ್ತಿ ಜನ ಸೇರಿಸದಂತೆ ಉಲ್ಲೇಖಿಸಿದ್ದಾರೆ. ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಸಾರ್ವಜನಿಕರ ಜವಾಬ್ದಾರಿಯಾಗಿದೆ ಎಂದು ಸಚಿವರು ತನ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.