ಉದಯಪುರ: ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ನಯ್ಯ ಲಾಲ್ ಹತ್ಯೆಯಾದ ಬಳಿಕ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದ್ದು ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ.
ನಿನ್ನೆ ಕನ್ನಯ್ಯ ಲಾಲ್ ಅಂತ್ಯಕ್ರಿಯೆ ವೇಳೆ ಕೆಲವರು ಕಲ್ಲು ತೂರಾಟ ನಡೆಸಿದ್ದು, ಪೊಲೀಸರು ಅಶ್ರುವಾಯು ಪ್ರಯೋಗಿಸಿದಾಗ ಅವರ ಮೇಲೂ ಹಲ್ಲೆ ನಡೆಸಿದ್ದಾರೆ. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಅಕ್ಕಪಕ್ಕದ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ಕರೆಸಿಕೊಳ್ಳಲಾಗಿದೆ.
ಹಂತಕರು ತಮ್ಮ ಕೃತ್ಯವನ್ನು ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಬಳಿಕ ಇವರು ಪೂರ್ಣವಾಗಿ ಮುಖ ಮುಚ್ಚಿದ ಹೆಲ್ಮೆಟ್ ಹಾಕಿಕೊಂಡು ಬೈಕಿನಲ್ಲಿ ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ ರಾಜಸ್ಥಾನ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅವರನ್ನು ಬಂಧಿಸಿದ್ದಾರೆ. ಈ ಬಂಧನ ಕಾರ್ಯಾಚರಣೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದನ್ನು ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಕೋ-ಆರ್ಡಿನೇಟರ್ ನಿತಿನ್ ಅಗರ್ವಾಲ್ ಎಂಬವರು ಟ್ವೀಟ್ ಮಾಡಿದ್ದಾರೆ.
ಈ ಮಧ್ಯೆ ಮೃತರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರವನ್ನು ಸಿಎಂ ಅಶೋಕ್ ಗೆಹ್ಲೋಟ್ ಘೋಷಿಸಿದ್ದಾರೆ. ಅಲ್ಲದೆ, ಬಿಜೆಪಿ ನಾಯಕ ಕಪಿಲ್ ಮಿಶ್ರಾ, ಕನ್ನಯ್ಯ ಲಾಲ್ ಕುಟುಂಬಕ್ಕೆ ನೆರವಾಗಲು ದೇಣಿಗೆ ಸಂಗ್ರಹಕ್ಕೆ ಮುಂದಾಗಿದ್ದು, ಇದಕ್ಕೆ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಿನ್ನೆ ಒಂದು ಕೋಟಿ ರೂಪಾಯಿಗಳಿಗೂ ಅಧಿಕ ಹಣ ಹರಿದು ಬಂದಿದೆ.