ಉಡುಪಿ ಪ್ರಕರಣ: ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು SDPI ಆಗ್ರಹ

Prasthutha|

- Advertisement -

ಉಡುಪಿ: ಉಡುಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಉಡುಪಿ ಜಿಲ್ಲಾಧ್ಯಕ್ಷ ಶಾಹಿದ್ ಆಲಿ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಇಲ್ಲಿನ ಖಾಸಗಿ ಕಾಲೇಜಿನಲ್ಲಿ ಸಹಪಾಠಿಗಳು ತಮಾಷೆಗಾಗಿ ನಡೆಸಿದ ಫ್ರಾಂಕ್ ವಿಡಿಯೋ ಪ್ರಕರಣವನ್ನು ಬಿಜೆಪಿ ಮತ್ತು ಸಂಘಪರಿವಾರ ಒಂದು ದೊಡ್ಡ ವಿವಾದವನ್ನಾಗಿ ಮಾಡುವ ಮೂಲಕ ಜಿಲ್ಲೆಯ ಕೋಮು ಸೌಹಾರ್ದತೆಯನ್ನು ಕೆಡಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

- Advertisement -

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜಿನ ಶೌಚಾಲಯದಲ್ಲಿ ಹಿಡನ್ ಕ್ಯಾಮರ ಇಟ್ಟಿರುವ ಹಾಗೂ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಬಗ್ಗೆ ಯಾವುದೇ ದಾಖಲೆ ಇಲ್ಲದೆ ಇರುವ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಕಾಲೇಜ್ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದ್ದರೂ ಸಹ ಸಂಘ ಪರಿವಾರ ಹಾಗೂ ಬಿಜೆಪಿ ಈ ಘಟನೆಯನ್ನು ರಾಷ್ಟ್ರೀಯ ಮಟ್ಟದ ವಿವಾದವನ್ನಾಗಿ ಮಾಡುವ ಮೂಲಕ ಜಿಲ್ಲೆಯಲ್ಲಿ ಪ್ರಕ್ಷುಬ್ದ ವಾತಾವರಣವನ್ನು ನಿರ್ಮಿಸಲು ಪ್ರಯತ್ನಿಸುತ್ತಿದೆ ಎಂದು ಶಾಹಿದ್ ಅಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಂದೊಮ್ಮೆ ಆ ವಿದ್ಯಾರ್ಥಿನಿಯರು ತಪ್ಪು ಮಾಡಿದ್ದರೆ ಸೂಕ್ತ ತನಿಖೆ ನಡೆಸಿ ಅವರ ವಿರುದ್ಧ ಕ್ರಮ ಕೈಗೊಳ್ಳಲಿ, ಆದರೆ ಈ ಪ್ರಕರಣದ ಹೆಸರಿನಲ್ಲಿ ಇಡೀ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರನ್ನು ಅನುಮಾನದಿಂದ ನೋಡುವ ವಾತಾವರಣವನ್ನು ಸಂಘ ಪರಿವಾರ ನಿರ್ಮಿಸಿದೆ. ಕಳೆದ ಬಾರಿ ಹಿಜಾಬ್ ಪ್ರಕರಣದಲ್ಲಿ ಅತ್ಯಂತ ವ್ಯವಸ್ಥಿತವಾಗಿ ಷಡ್ಯಂತ್ರವನ್ನು ರೂಪಿಸಿ ಮುಸ್ಲಿಂ ವಿದ್ಯಾರ್ಥಿನಿಯರನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿದ್ದ ಬಿಜೆಪಿ ಮತ್ತು ಸಂಘ ಪರಿವಾರ ಈ ಬಾರಿ ಹಿಡನ್ ಕ್ಯಾಮೆರಾದ ಹೆಸರಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರನ್ನು ಗುರಿಪಡಿಸುತ್ತಿದೆ. ಇದಲ್ಲದೆ ಮಣಿಪುರದಲ್ಲಿ ನಿರಂತರವಾಗಿ ನಡೆಯುತ್ತಿರುವ ಹಿಂಸಾಚಾರ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಗಟ್ಟಲು ಸಂಪೂರ್ಣವಾಗಿ ವಿಫಲವಾಗಿರುವ ಕೇಂದ್ರ ಹಾಗೂ ಮಣಿಪುರದ ಬಿಜೆಪಿ ಸರಕಾರದ ವಿರುದ್ಧ ಜನರು ಆಕ್ರೋಶವನ್ನು ವ್ಯಕ್ತಪಡಿಸುತ್ತಿರುವ ಸಂದರ್ಭದಲ್ಲಿ ಜನರ ಗಮನವನ್ನು ಬೇರೆ ಕಡೆ ಸೆಳೆಯಲು ಬಿಜೆಪಿ ಸ್ಥಳೀಯ ವಿಷಯಗಳನ್ನು ದೊಡ್ಡ ವಿವಾದವಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಆದ್ದರಿಂದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹಾಗೂ ಫೇಕ್ ವಿಡಿಯೋಗಳನ್ನು ಹರಡುವ ಮೂಲಕ ಸಮಾಜದಲ್ಲಿ ಗೊಂದಲವನ್ನು ನಿರ್ಮಿಸುತ್ತಿರುವ ವ್ಯಕ್ತಿಗಳ ವಿರುದ್ಧ ಪೊಲೀಸ್ ಇಲಾಖೆ ಪ್ರಕರಣವನ್ನು ದಾಖಲಿಸಿ ನಿರ್ದಾಕ್ಷಿಣ್ಯ ಕ್ರಮವನ್ನು ಕೈಗೊಳ್ಳಬೇಕು. ಆ ಮೂಲಕ ಜಿಲ್ಲೆಯ ಶಾಂತಿ ಸೌಹಾರ್ದತೆಯನ್ನು ಕಾಪಾಡಲು  ಶ್ರಮಿಸಬೇಕು ಎಂದು ಶಾಹಿದ್ ಆಲಿ ಆಗ್ರಹಿಸಿದ್ದಾರೆ

Join Whatsapp