ಉಡುಪಿ: ಹಿಂದೂ ಜಾಗರಣ ವೇದಿಕೆ ವತಿಯಿಂದ ಉಡುಪಿಯಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಮೆರವಣಿಗೆಯಲ್ಲಿ ಸಾರ್ವಜನಿಕವಾಗಿ ತಲವಾರು ಪ್ರದರ್ಶಿಸುತ್ತಾ ಭಯದ ವಾತಾವರಣವನ್ನು ಸೃಷ್ಟಿಸಿದ ಕ್ರಮವನ್ನು ಸೋಶಿಯಲ್ ಡಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದು ಎಸ್ ಡಿಪಿಐ ಉಡುಪಿ ಜಿಲ್ಲಾಧ್ಯಕ್ಷ B N ಶಾಹಿದ್ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪೊಲೀಸರ ಸಮ್ಮುಖದಲ್ಲೇ ಸಾರ್ವಜನಿಕವಾಗಿ ತಲವಾರು ಪ್ರದರ್ಶಿಸುತ್ತಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದಿರುವುದು ಖಂಡನೀಯ. ಕಳೆದ ಬಾರಿ ನಡೆದ ಕಾರ್ಯಕ್ರಮದಲ್ಲಿಯೂ ಇದೇ ರೀತಿಯ ತಲವಾರು, ತ್ರಿಶೂಲ ಮುಂತಾದ ಮಾರಕ ಆಯುಧಗಳನ್ನು ಪ್ರದರ್ಶಿಸಲಾಗಿತ್ತು. ಈ ಬಗ್ಗೆ ಪೊಲೀಸ್ ಇಲಾಖೆಗೆ ದೂರು ಸಲ್ಲಿಸಿದ್ದರೂ ಯಾವುದೇ ರೀತಿಯ ಕ್ರಮವನ್ನು ಕೈಗೊಂಡಿರಲಿಲ್ಲ. ಪೊಲೀಸರ ನಿರ್ಲಕ್ಷದಿಂದಾಗಿ ಇಂತಹ ಘಟನೆಗಳು ಪುನರಾವರ್ತನೆಯಾಗುತ್ತಿದ್ದು, ಇಂದು ತಲವಾರು ಪ್ರದರ್ಶಿಸಿದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರ ಹಾಗೂ ಸಂಘಟಕರ ವಿರುದ್ಧ ಪೊಲೀಸರು ಅಕ್ರಮ ಶಸ್ತ್ರಾಸ್ತ್ರ ಕಾಯಿದೆ ಅಡಿ ಸ್ವಯಂ ಪ್ರೇರಿತವಾಗಿ ಪ್ರಕರಣವನ್ನು ದಾಖಲಿಸಿ ಬಂಧಿಸಬೇಕು ಎಂದು B N ಶಾಹಿದ್ ಅಲಿ ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.