ಉಡುಪಿ: ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮುಸ್ಲಿಮ್ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ ಕಾರಣಕ್ಕೆ ತರಗತಿ ಪ್ರವೇಶ ನಿರಾಕರಿಸಿರುವ ವಿವಾದ ಮತ್ತಷ್ಟು ಜಟಿಲಗೊಂಡಿದ್ದು, ಗುರುವಾರ ಸಂತ್ರಸ್ತ ವಿದ್ಯಾರ್ಥಿಗಳು ತಮಗಾಗುತ್ತಿರುವ ಅನ್ಯಾಯವನ್ನು ಖಂಡಿಸಿ ಕಾಲೇಜು ಮುಂಭಾಗ ಭಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸಿದರು.
ಸ್ಕಾರ್ಫ್ ವಿವಾದದ ಉಂಟಾಗಿ ಇಷ್ಟು ದಿನಗಳಾದರೂ ಅಧಿಕಾರಿಗಳು ಈ ಬಗ್ಗೆ ಗಮನಹರಿಸದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ನಮಗೆ ತರಗತಿ ಪ್ರವೇಶಿಸಲು ಅವಕಾಶ ನೀಡುತ್ತಿಲ್ಲ. ಇದರಿಂದ ಪಾಠ ಕೇಳಲು ಸಾಧ್ಯವಾಗುತ್ತಿಲ್ಲ. ನಮ್ಮ ಸಂವಿಧಾನಾತ್ಮಕ ಹಕ್ಕನ್ನು ಕಸಿದಿಟ್ಟು ಮಾನಸಿಕವಾಗಿ ತೊಂದರೆ ಕೊಡುತ್ತಿದ್ದಾರೆ. ಈ ಮೂಲಕ ನಮ್ಮ ವಿದ್ಯಾರ್ಥಿ ಜೀವನವನ್ನು ಹಾಳುಗೆಡವುವ ಉದ್ದೇಶ ಹೊಂದಿದ್ದಾರೆ ಎಂದು ವಿದ್ಯಾರ್ಥಿಗಳು ತಮ್ಮ ಅಳಲು ತೋಡಿಕೊಂಡರು.