ಉಳ್ಳಾಲ: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಾಮಂಜೂರಿನ ನಿಶಾಂತ್ ಶೆಟ್ಟಿ(35) ಬಂಧಿತ ವ್ಯಕ್ತಿ.
ನಿಶಾಂತ್ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಗಾಂಜಾ ಖರೀದಿಸಿಕೊಂಡು ಮಂಗಳೂರು ನಗರಕ್ಕೆ ರೈಲಿನಲ್ಲಿ ತಂದು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದರು.
ಉಳ್ಳಾಲ ತಾಲೂಕು ತೊಕ್ಕೊಟ್ಟು ಒಳಪೇಟೆಯ ಕೃಷ್ಣನಗರ ಪರಿಸರದಲ್ಲಿ ಗೂಡ್ಸ್ ಟೆಂಪೋವೊಂದರಲ್ಲಿ ನಿಶಾಂತ್ ಗಾಂಜಾವನ್ನು ಸಾಗಾಟ ಮಾಡುತ್ತಿದ್ದಾಗ ಸೆರೆ ಹಿಡಿಯಲಾಗಿದೆ.
ಈತನ ವಿರುದ್ಧ ಈ ಹಿಂದೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಅಕ್ರಮ ಪಿಸ್ತೂಲ್ ಹೊಂದಿದ ಪ್ರಕರಣ, ಕಳವು ಪ್ರಕರಣ, ಬರ್ಕೆ ಪೊಲೀಸ್ ಠಾಣೆಯಲ್ಲಿ ಸರಕಳ್ಳತನ ಪ್ರಕರಣ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ವಿಟ್ಲ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಮತ್ತು ಕಳ್ಳತನ ಪ್ರಕರಣ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ ಪ್ರಕರಣ ಹೀಗೆ ಒಟ್ಟು 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.