ಅತ್ಯಾಚಾರ ಪ್ರಕರಣ | ಬಿಜೆಪಿ ಮಾಜಿ ಶಾಸಕನ ವಿರುದ್ಧ ದೂರು ದಾಖಲಿಸದ ಜಿಲ್ಲಾಧಿಕಾರಿ, ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸಿಬಿಐ ನಿರ್ದೇಶನ

ಲಖನೌ : ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದ್ದ 2017ರ ಉನ್ನಾವೊ ಅತ್ಯಾಚಾರ ಪ್ರಕರಣದ ಆರೋಪಿ ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್ ವಿರುದ್ಧ ಎಫ್ ಐಆರ್ ದಾಖಲಿಸುವಲ್ಲಿ ವಿಫಲವಾದ ಜಿಲ್ಲಾಧಿಕಾರಿ ಹಾಗೂ ಮೂವರು ಪೊಲೀಸ್ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಬಿಐ ಉತ್ತರ ಪ್ರದೇಶ ಸರಕಾರಕ್ಕೆ ಪತ್ರ ಬರೆದಿದೆ.

ಆಗಸ್ಟ್ ಎರಡನೇ ವಾರದಲ್ಲಿ ಈ ಸಂಬಂಧ ಸರಕಾರಕ್ಕೆ ಪತ್ರ ಬರೆದಿದ್ದರೂ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಸಿಬಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
2017ರ ಜೂನ್ ನಲ್ಲಿ ಅತ್ಯಾಚಾರ ಪ್ರಕರಣ ನಡೆದಿತ್ತು. ಆದರೆ, ಪೊಲೀಸರು 2018ರ ಏ.12ರಂದು ಎಫ್ ಐಆರ್ ದಾಖಲಿಸಿದ್ದಾರೆ. ಸಂತ್ರಸ್ತೆಯು ಉತ್ತರ ಪ್ರದೇಶ ಮುಖ್ಯಮಂತ್ರಿಯವರ ಲಖನೌ ನಿವಾಸದ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಬಳಿಕ ಎಫ್ ಐಆರ್ ದಾಖಲಿಸಲಾಗಿದೆ. ಆರೋಪಿ ಕುಲದೀಪ್ ಸಿಂಗ್ ಗೆ ದೆಹಲಿ ಕೋರ್ಟ್ ಕಳೆದ ವರ್ಷ ಜೀವಾವಧಿ ಶಿಕ್ಷೆ ವಿಧಿಸಿದೆ.

- Advertisement -

ಜಿಲ್ಲಾ ಮ್ಯಾಜಿಸ್ಟ್ರೇಟ್ ಅದಿತಿ ಸಿಂಗ್, ಪೊಲೀಸ್ ವರಿಷ್ಠಾಧಿಕಾರಿಗಳಾದ ಪುಷ್ಪಾಂಜಲಿ ದೇವಿ ಮತ್ತು ನೇಹಾ ಪಾಂಡೆ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಷ್ಟಭುಜ ಪ್ರಸಾದ್ ಸಿಂಗ್ ಮುಂತಾದವರ ವಿರುದ್ಧ ಕ್ರಮಕ್ಕೆ ಸಿಬಿಐ ಶಿಫಾರಸು ಮಾಡಿದೆ.