ಬೆಂಗಳೂರು: ಅನಧಿಕೃತ ಫ್ಲೆಕ್ಸ್ ಅಳವಡಿಕೆ ಆರೋಪದಡಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ವಿರುದ್ಧ ಪ್ರಕರಣ ದಾಖಲಾಗಿದೆ.
ನಗರದ ಟೌನ್ ಹಾಲ್ ಮುಂಭಾಗ, ಕಾರ್ಪೋರೇಷನ್ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್ ಅಳವಡಿಕೆ ಬಗ್ಗೆ ಬಿಬಿಎಂಪಿ ಕಂದಾಯ ಅಧಿಕಾರಿ ಹಾಗೂ ಸಾಮಾಜಿಕ ಹೋರಾಟಗಾರರಿಂದ ಪ್ರತ್ಯೇಕ ಎರಡು ದೂರು ದಾಖಲಾದ ಹಿನ್ನೆಲೆಯಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತು ಫ್ಲೆಕ್ಸ್, ಬ್ಯಾನರ್ ನಿಷೇಧಿಸಿ ಬಿಬಿಎಂಪಿ ಮತ್ತು ಸರ್ಕಾರ ಆದೇಶಿಸಿದೆ. ಅಲ್ಲದೇ ಈ ಬಗ್ಗೆ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಯುತ್ತಿದೆ. ಇದೀಗ ನಗರದಲ್ಲಿ ಅಳವಡಿಸುವ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳನ್ನು ತೆರವುಗೊಳಿಸಲು ಮತ್ತು ಕಾನೂನು ಉಲ್ಲಂಘಿಸಿದವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಸರ್ಕಾರಕ್ಕೆ ಕೋರ್ಟ್ ಆದೇಶಿಸಿದೆ.
ಈ ನಡುವೆ ಬಿ.ಕೆ ಹರಿಪ್ರಸಾದ್ ಗೆ ಅಭಿನಂದನಾ ಸಮಾರಂಭದ ಹಿನ್ನೆಲೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಪೋರೇಷನ್ ವೃತ್ತದ ಸುತ್ತಮುತ್ತ ಫ್ಲೆಕ್ಸ್, ಬ್ಯಾನರ್ ಅಳವಡಿಸಲಾಗಿದೆ ಈ ಬಗ್ಗೆ ಕ್ರಮ ವಹಿಸಬೇಕಾಗಿ ಹಲಸೂರು ಗೇಟ್ ಠಾಣೆಯಲ್ಲಿ ಪ್ರತ್ಯೇಕ ಎರಡು ದೂರು ದಾಖಲಾಗಿತ್ತು.
ಈ ಬಗ್ಗೆ ಕ್ರಮಕ್ಕೆ ಮುಂದಾಗಿರುವ ಪೊಲೀಸರು, ಬಿಕೆ ಹರಿಪ್ರಸಾದ್ ಅಭಿನಂದನಾ ಕಾರ್ಯಕ್ರಮಕ್ಕೆ 150ಕ್ಕೂ ಹೆಚ್ಚು ಫ್ಲೆಕ್ಸ್ ಅಳವಡಿಕೆ ಮಾಡಿದ್ದ ನಲಪಾಡ್ ಮತ್ತು ತಂಡದ ವಿರುದ್ಧ ಎಫ್ ಐಆರ್ ದಾಖಲಾಗಿದೆ.