ನವದೆಹಲಿ: ಕೇಂದ್ರ ಲೋಕಸೇವಾ ಆಯೋಗವು 2024ರಲ್ಲಿ ನಡೆಸಿದ ಕೇಂದ್ರ ನಾಗರಿಕ ಸೇವಾ ಪರೀಕ್ಷೆಯ ಫಲಿತಾಂಶ ಮಂಗಳವಾರ ಪ್ರಕಟಗೊಂಡಿದ್ದು, ಶಕ್ತಿ ದುಬೆ ದೇಶಕ್ಕೆ ಮೊದಲಿಗರಾಗಿದ್ದಾರೆ.
ಅಲಹಾಬಾದ್ ವಿಶ್ವವಿದ್ಯಾಲಯದಿಂದ ಜೀವರಸಾಯನ ವಿಜ್ಞಾನದಲ್ಲಿ ಪದವಿ ಪಡೆದಿರುವ ದುಬೆ, ಲೋಕಸೇವಾ ಆಯೋಗದ ಪರೀಕ್ಷೆಗೆ ರಾಜಕೀಯ ವಿಜ್ಞಾನ ಮತ್ತು ಅಂತರರಾಷ್ಟ್ರೀಯ ವ್ಯವಹಾರ ವಿಷಯಗಳನ್ನು ಆಯ್ಕೆ ಮಾಡಿಕೊಂಡಿದ್ದರು ಎಂದು ಆಯೋಗ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಬರೊಡಾದ ಎಂಎಸ್ ವಿಶ್ವವಿದ್ಯಾಲಯದಿಂದ ಬಿ.ಕಾಂ. ಪದವಿ ಪಡೆದಿರುವ ಹರ್ಷಿತಾ ಗೋಯಲ್ ಅವರು 2ನೇ ರ‍್ಯಾಂಕ್ ಪಡೆದಿದ್ದಾರೆ. ಇವರೂ ರಾಜಕೀಯ ವಿಜ್ಞಾನ ಮತ್ತು ಅಂತರರಾಷ್ಟ್ರೀಯ ವ್ಯವಹಾರ ವಿಷಯಗಳನ್ನು ಆಯ್ಕೆ ಮಾಡಿಕೊಂಡಿದ್ದರು.
ವೆಲ್ಲೋರ್‌ನ ವಿಐಟಿ ಕಾಲೇಜಿನಿಂದ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಷಯದಲ್ಲಿ ಬಿ.ಟೆಕ್. ಎಂಜಿನಿಯರಿಂಗ್ ಪದವಿ ಪಡೆದಿರುವ ಡೊಂಗ್ರೆ ಅರ್ಚಿತ್ ಪರಾಗ್ ಅವರು ಮೂರನೇ ರ‍್ಯಾಂಕ್ ಪಡೆದಿದ್ದು, ತತ್ವಶಾಸ್ತ್ರವನ್ನು ಮುಖ್ಯ ಪರೀಕ್ಷೆಗೆ ಆಯ್ಕೆ ಮಾಡಿಕೊಂಡಿದ್ದರು.
ಮೊದಲು ಐದು ರ‍್ಯಾಂಕ್‌ಗಳಲ್ಲಿ ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಇದ್ದಾರೆ.