ಗುಲ್ಬರ್ಗಾ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಉತ್ತರ ಕರ್ನಾಟಕದ ಜಿಲ್ಲೆಗಳ ನಾಯಕರ ‘ಗ್ರಾಮ ಪಂಚಾಯತ್ ಚುನಾವಣೆಗಳ ಅವಲೋಕನಕ್ಕಾಗಿ ವಿಶೇಷ ಸಭೆಯು ಡಿ.27ರಂದು ಗುಲ್ಬರ್ಗ ಜಿಲ್ಲಾ ಕಛೇರಿಯಲ್ಲಿ ಜರುಗಿತು.
ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಮತ್ತು ರಾಜ್ಯ ಕಾರ್ಯದರ್ಶಿ ಮಂಡಳಿ ಸಮಿತಿ ಸದಸ್ಯ ಅಬ್ದುಲ್ ರಹೀಂಪಟೇಲ್ ಸಭೆಯ ನೇತೃತ್ವ ವಹಿಸಿದ್ದರು.
ಕೇಂದ್ರ ಸರ್ಕಾರದ ರೈತ ವಿರೋಧಿ ಕೃಷಿಕಾನೂನುಗಳನ್ನು ಹಿಂಪಡೆಯಲು ಆಗ್ರಹಿಸಿ ಹಲವು ದಿನಗಳಿಂದ ರಾಷ್ಟ್ರ ರಾಜಧಾನಿಯಲ್ಲಿ ಅನ್ನದಾತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿಸತ್ಯಾಗ್ರಹವನ್ನು ಬೆಂಬಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಬೆಂಗಳೂರಿನ ಮೌರ್ಯಸರ್ಕಲ್ ನಲ್ಲಿ ಅಖಿಲ ಭಾರತ ಕಿಸಾನ್ ಸಂಘರ್ಷಸಮನ್ವಯಸಮಿತಿ ಮತ್ತು ಐಕ್ಯಹೋರಾಟ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ ಧರಣಿಸತ್ಯಾಗ್ರಹ ಮತ್ತು ಗುಲ್ಬರ್ಗದಲ್ಲಿ ನಡೆಯುತ್ತಿರುವ ಹೋರಾಟಗಳಲ್ಲಿ ಪಕ್ಷದ ನಾಯಕರುಗಳು ಭಾಗವಹಿಸಬೇಕು ಎಂದು ನಿರ್ಣಯ ಕೈಗೊಳ್ಳಲಾಯಿತು ಎಂದು ಪಕ್ಷವು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.
“ಕೇಂದ್ರ ಸರ್ಕಾರ ಕಾರ್ಪೊರೇಟ್ ಕಂಪೆನಿಗಳ ತಾಳಕ್ಕೆ ತಕ್ಕಂತೆ ಕುಣಿಯುತ್ತಾ ರೈತ ವಿರೋಧಿ ಕಾನೂನುಗಳನ್ನು ಜಾರಿಗೆ ತಂದು ರೈತರ ಮರಣ ಶಾಸನ ಬರೆಯಲು ಪ್ರಯತ್ನಿಸುತ್ತಿರುವುದು ಖಂಡನೀಯ. ಕೇಂದ್ರ ಸರ್ಕಾರ ಕೂಡಲೇ ರೈತ ವಿರೋಧಿ ಕೃಷಿಕಾನೂನುಗಳನ್ನು ಹಿಂಪಡೆಯಬೇಕೆಂದು ಸಭೆಯು ಆಗ್ರಹಿಸುತ್ತದೆ” ಎಂದು ಸಭೆಯು ಒತ್ತಾಯಿಸಿದೆ.
ಗುಲ್ಬರ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾರಿಜ್ವಾನ್ ಸ್ವಾಗತಿಸಿ, ವಂದಿಸಿದರು. ಸಭೆಯಲ್ಲಿ ಧಾರವಾಡ ಜಿಲ್ಲಾ ಅಧ್ಯಕ್ಷರಾದ ರಫೀಕ್, ಯಾದಗಿರಿ ಜಿಲ್ಲಾ ಅಧ್ಯಕ್ಷರಾದ ಖಾಲಿದ್ಹುಸೇನ್, ರಾಯಚೂರು ಜಿಲ್ಲಾ ಅಧ್ಯಕ್ಷರಾದ ಡಾ.ಮಹಮ್ಮದ್ ಸುಹೇಲ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ನಂತರ ಪ್ರಥಮ ಬಾರಿಗೆ ಗುಲ್ಬರ್ಗ ಜಿಲ್ಲೆಗೆ ಭೇಟಿ ನೀಡಿದ ಅಪ್ಸರ್ ಕೂಡ್ಲಿಪೇಟೆಯವರಿಗೆ ಗುಲ್ಬರ್ಗ ಜಿಲ್ಲಾ ಸಮಿತಿ ವತಿಯಿಂದ ಶಾಲು ಹೊದಿಸಿ ಸನ್ಮಾನಿಸಲಾಯಿತು