ಲಕ್ನೋ: ಧಾರ್ಮಿಕ ಸ್ಥಳಗಳಲ್ಲಿ ಅಳವಡಿಸಿರುವ ಧ್ವನಿವರ್ಧಕಗಳನ್ನು ತೆಗೆದು ಹಾಕುವಂತೆ ಮುಖ್ಯಮಂತ್ರಿ ಆದಿತ್ಯನಾಥ್ ಸರಕಾರ ನಿರ್ದೇಶನ ನೀಡಿದ ಬೆನ್ನಲ್ಲೇ ರಾಜ್ಯದ ವಿವಿಧ ಧಾರ್ಮಿಕ ಸ್ಥಳಗಳಲ್ಲಿನ ಧ್ವನಿವರ್ಧಕಗಳನ್ನು ತೆಗೆದು ಹಾಕಲಾಗಿದೆ ಎಂದು ವರದಿಯಾಗಿದೆ.
72 ಗಂಟೆಗಳಲ್ಲೇ 6,031 ಧ್ವನಿವರ್ಧಕಗಳನ್ನು ತೆಗೆದು ಹಾಕಲಾಗಿದೆ. ಇದಲ್ಲದೆ, ನಿಗದಿತ ಡೆಸಿಬಲ್ ಮಟ್ಟಗಳಿಗೆ ಅನುಗುಣವಾಗಿ 30,000 ಧ್ವನಿವರ್ಧಕಗಳ ಪರಿಮಾಣವನ್ನು ಕಡಿಮೆ ಮಾಡಲಾಗಿದೆ.
ಧಾರ್ಮಿಕ ಸ್ಥಳಗಳ ಸುತ್ತಮುತ್ತಲಿನಲ್ಲಿ ವಾಸಿಸುವ ಜನರಿಗೆ ತೊಂದರೆಯಾಗದಂತೆ ಧ್ವನಿವರ್ಧಕಗಳ ಶಬ್ದವನ್ನು ನಿರ್ಬಂಧಿಸಲು ಈ ಕ್ರಮವನ್ನು ಜಾರಿಗೊಳಿಸಲಾಗಿದೆ. ರಾಜ್ಯದ ಧಾರ್ಮಿಕ ಸ್ಥಳಗಳಲ್ಲಿ ಅಕ್ರಮ ಧ್ವನಿವರ್ಧಕಗಳನ್ನು ತೆಗೆದುಹಾಕಲು ಆದೇಶ ಹೊರಡಿಸಲಾಗಿತ್ತು. ಈ ಸಂಬಂಧ ಏಪ್ರಿಲ್ 30ರೊಳಗೆ ಜಿಲ್ಲೆಗಳಿಂದ ವರದಿಯನ್ನು ಕೋರಲಾಗಿದೆ ಎಂದು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನೀಶ್ ಅವಸ್ತಿ ತಿಳಿಸಿದ್ದಾರೆ.
ಸ್ಥಳೀಯ ಮಟ್ಟದಲ್ಲಿ ಧಾರ್ಮಿಕ ಮುಖಂಡರೊಂದಿಗೆ ಚರ್ಚೆ ನಡೆಸುವ ಮೂಲಕ ಅವರ ಸಹಕಾರದೊಂದಿಗೆ ಅನಧಿಕೃತ ಧ್ವನಿವರ್ಧಕಗಳನ್ನು ತೆಗೆದುಹಾಕುವುದನ್ನು ಖಚಿತಪಡಿಸಿಕೊಳ್ಳಲು ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ” ಎಂದು ಅವಸ್ತಿ ಹೇಳಿದರು.