ಲಕ್ನೋ : ಉತ್ತರಪ್ರದೇಶದ ಶಾಲೆಯೊಂದರಲ್ಲಿ ಗಣರಾಜ್ಯೋತ್ಸವ ದಿನದಂದು ವಿದ್ಯಾರ್ಥಿಗಳು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಆದಿತ್ಯನಾಥ ಅವರನ್ನು ಶ್ಲಾಘಿಸಿ ಘೋಷಣೆ ಕೂಗಿದ್ದರು. ಶಾಲೆಯ ಪ್ರಾಂಶುಪಾಲರು ಹಾಗೂ ಶಿಕ್ಷಕರು ಘೋಷಣೆ ಕೂಗುವಂತೆ ಮಕ್ಕಳಿಗೆ ಸೂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ತನಿಖೆಗೆ ಆದೇಶಿಸಲಾಗಿದೆ.
ಜಿಲ್ಲೆಯ ಸೊಹ್ರಾತ್‌ಗಡದಲ್ಲಿರುವ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ನಡೆದ ಕಾರ್ಯಕ್ರಮದ ವೇಳೆ ಮಕ್ಕಳು ಘೋಷಣೆಗಳನ್ನು ಕೂಗಿದ್ದರು. ಈ ಸಂದರ್ಭದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಕ್ಕಳು ರಾಷ್ಟ್ರಗೀತೆ ಹಾಡಿದ ನಂತರ, ಶಿಕ್ಷಕರ ಸೂಚನೆ ಮೇರೆಗೆ ಪ್ರಧಾನಿ ಮೋದಿ, ಸಿಎಂ ಯೋಗಿ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರ ಹೆಸರುಗಳನ್ನು ಕೂಗಿರುವುದು ವಿಡಿಯೊದಲ್ಲಿದೆ.
ಸದ್ಯ ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿರುವ ಉತ್ತರ ಪ್ರದೇಶದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ರಾಜಕೀಯ ವ್ಯಕ್ತಿಗಳ ಪರ ಘೋಷಣೆ ಕೂಗಿರುವುದು ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ʼಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ವೈರಲ್ ಆದ ಬಳಿಕ ಈ ವಿಚಾರ ನಮ್ಮ ಗಮನಕ್ಕೆ ಬಂದಿದೆ. ಪ್ರಕರಣದ ತನಿಖೆ ನಡೆಸುವಂತೆ ಪ್ರಾಥಮಿಕ ಶಿಕ್ಷಣ ಅಧಿಕಾರಿಗೆ ಸೂಚಿಸಿದ್ದೇವೆ. ತಪ್ಪು ಮಾಡಿದವರು ಯಾರೇ ಆಗಿದ್ದರೂ ಕ್ರಮ ಕೈಗೊಳ್ಳಲಾಗುವುದುʼ ಎಂದು ಜಿಲ್ಲಾಧಿಕಾರಿ ದೀಪಕ್ ಮೀನಾ ತಿಳಿಸಿದ್ದಾರೆ.