ಉತ್ತರಕಾಶಿ(ಉತ್ತರಾಖಂಡ): ಮಧ್ಯಪ್ರದೇಶದ ಪನ್ನಾ ಜಿಲ್ಲೆಯಿಂದ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಭಾನುವಾರ ಉತ್ತರಕಾಶಿ ಜಿಲ್ಲೆಯ ದಮ್ತಾ ಬಳಿ ಪ್ರಪಾತಕ್ಕೆ ಬಿದ್ದ ಪರಿಣಾಮ ಒಟ್ಟು 26 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
“ಅಪಘಾತದಲ್ಲಿ ಒಟ್ಟು 26 ಜನರು ಸಾವನ್ನಪ್ಪಿದ್ದಾರೆ ಮತ್ತು 4 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
28 ಯಾತ್ರಾರ್ಥಿಗಳು ಸೇರಿದಂತೆ 30 ಜನರನ್ನು ಕರೆದೊಯ್ಯುತ್ತಿದ್ದ ಬಸ್ ಉತ್ತರಕಾಶಿಯ ಯಮುನೋತ್ರಿ ಧಾಮ್ ಗೆ ತೆರಳುತ್ತಿದ್ದಾಗ ಅದು ಪ್ರಪಾತಕ್ಕೆ ಬಿದ್ದಿದೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್ ಡಿಆರ್ ಎಫ್) ಸಿಬ್ಬಂದಿ ಮತ್ತು ಜಿಲ್ಲಾಡಳಿತ ನಡೆಸಿದೆ.
ಪ್ರಾಣಹಾನಿಗೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿ, ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ಪಿ.ಎಂ.ಎನ್.ಆರ್.ಎಫ್.ನಿಂದ ತಲಾ 2 ಲಕ್ಷ ರೂ.ಗಳ ಪರಿಹಾರ ಮತ್ತು ಗಾಯಗೊಂಡವರಿಗೆ ತಲಾ 50,000 ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ.
ಘಟನೆಯ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಮುಖ್ಯಮಂತ್ರಿ ಪುಷ್ಕರ್ ಧಾಮಿ ಆದೇಶಿಸಿದ್ದಾರೆ