ಮುಂಬೈ : ಎಲ್ಗಾರ್ ಪರಿಷದ್ ಪ್ರಕರಣಕ್ಕೆ ಸಂಬಂಧಿಸಿ ಬಂಧನದಲ್ಲಿರುವ ತೆಲುಗು ಕವಿ, ಸಾಮಾಜಿಕ ಕಾರ್ಯಕರ್ತ ವರವರ ರಾವ್ ಜಾಮೀನಿಗಾಗಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನ್ಯಾಯಾಲಯವು ಇಂದು 3 ಗಂಟೆಗೆ ರಾವ್ ಅವರ ಜಾಮೀನು ಅರ್ಜಿ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.
ಕಳೆದ ತಿಂಗಳು ರಾವ್ ಅವರ ಪತ್ನಿ ಪೆಂಡ್ಯಾಲ ಹೇಮಲತಾ ಸುಪ್ರೀಂ ಕೋರ್ಟ್ ನಲ್ಲಿ ರಾವ್ ಅವರ ಬಿಡುಗಡೆಗೆ ಅರ್ಜಿ ಸಲ್ಲಿಸಿದ್ದರು. ರಾವ್ ಅವರ ಅರ್ಜಿ ಸೆ.17ರಿಂದ ಹೈಕೋರ್ಟ್ ನಲ್ಲಿ ವಿಚಾರಣೆಯಾಗದ ಬಗ್ಗೆ ಕಾಳಜಿ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಈ ಬಗ್ಗೆ ಸಾಧ್ಯವಾದಷ್ಟು ಬೇಗ ಗಮನ ಹರಿಸುವಂತೆ ಹೈಕೋರ್ಟ್ ಗೆ ಮನವಿ ಮಾಡಿತ್ತು.
ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಗೆ ಬುಧವಾರ ಜಾಮೀನು ಮಂಜೂರು ಮಾಡುವಾಗ, ಹೈಕೋರ್ಟ್ ಗಳು ವೈಯಕ್ತಿಕ ಸ್ವಾತಂತ್ರ್ಯದ ರಕ್ಷಣೆಯ ವಿಷಯದಲ್ಲಿ ತಮ್ಮ ಅಧಿಕಾರ ಚಲಾಯಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿರುವುದರಿಂದ, ಇಂದಿನ ರಾವ್ ಅವರ ಜಾಮೀನು ಅರ್ಜಿ ವಿಚಾರಣೆ ಮಹತ್ವದ್ದಾಗಿದೆ.