ಬೆಂಗಳೂರಿಗೆ ಬಂದಿಳಿದ ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು

Prasthutha|

ಬೆಂಗಳೂರು: ಎರಡು ದಿನಗಳ ರಾಜ್ಯ ಭೇಟಿಗಾಗಿ ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಇಂದು ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದರು. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಎಚ್.ಎ.ಎಲ್. ವಿಮಾನ ನಿಲ್ದಾಣದಲ್ಲಿ ಉಪರಾಷ್ಟ್ರಪತಿ ಅವರನ್ನು ಬರಮಾಡಿಕೊಂಡರು. ರಾಜ್ಯ ಕ್ರೀಡಾ ಸಚಿವ ನಾರಾಯಣಗೌಡ, ಸಂಸದ ಪಿ.ಸಿ.ಮೋಹನ್ ಮತ್ತಿತರರು ಉಪಸ್ಥಿತರಿದ್ದರು.
ನಂತರ ರಾಜಭವನಕ್ಕೆ ಆಗಮಿಸಿದ ವೆಂಕಯ್ಯ ನಾಯ್ಡು ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸ್ವಾಗತಿಸಿದರು.
ಬೆಂಗಳೂರಿನಲ್ಲಿ ನಾಳೆಯಿಂದ ಆರಂಭವಾಗಲಿರುವ ಎರಡನೇ ಆವೃತ್ತಿಯ ಖೇಲೋ ಇಂಡಿಯಾ ವಿಶ್ವವಿದ್ಯಾಲಯಗಳ ಕ್ರೀಡಾಕೂಟಕ್ಕೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಚಾಲನೆ ನೀಡಲಿದ್ದಾರೆ.

- Advertisement -


ಕೇಂದ್ರ ವಾರ್ತಾ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್, ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತಿತರ ಗಣ್ಯರು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಮೇ 3 ರಂದು ಜೈನ್ ಗ್ಲೋಬಲ್ ಕ್ಯಾಂಪಸ್ನಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಮತ್ತಿತರರು ಪಾಲ್ಗೊಳ್ಳುವ ನಿರೀಕ್ಷೆಯಿದೆ.


ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ಮತ್ತು ದೇಶದ ಶ್ರೀಮಂತ ಸಾಂಸ್ಕೃತಿಕ ವೈಭವವನ್ನು ಪ್ರತಿನಿಧಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಲಾಗುವುದು, ಸ್ವಾತಂತ್ರ್ಯ ಅಮೃತ ಮಹೋತ್ಸವದ ನೃತ್ಯ ಪ್ರದರ್ಶನ, ಯುವ ಶಕ್ತಿಯ ಸಂದೇಶ ಸಾರುವ ಆಕ್ರೋಬ್ಯಾಟಿಕ್ ಪ್ರದರ್ಶನ ಇರಲಿದೆ ಎಂದು ಸಚಿವ ನಾರಾಯಣಗೌಡ ತಿಳಿಸಿದ್ದಾರೆ.

- Advertisement -


ಕ್ರೀಡಾಕೂಟದಲ್ಲಿ ದೇಶಾದ್ಯಂತ 200 ವಿಶ್ವವಿದ್ಯಾನಿಲಯಗಳಿಂದ ಸುಮಾರು 4 ಸಾವಿರದ 500ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಕರ್ನಾಟಕದಿಂದ ಒಟ್ಟು 12 ವಿಶ್ವವಿದ್ಯಾನಿಲಯಗಳಿಂದ 291 ಕ್ರೀಡಾಪಟುಗಳು ಸ್ಪರ್ಧಿಸಲಿದ್ದಾರೆ. ಅಥ್ಲೆಟಿಕ್ಸ್, ಈಜು, ಕರಾಟೆ, ಯೋಗ, ಮಲ್ಲಕಂಬ ಕ್ರೀಡೆಗಳಲ್ಲಿ ಹೆಚ್ಚಿನ ಪದಕಗಳನ್ನು ನಿರೀಕ್ಷಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Join Whatsapp