ಬೆಂಗಳೂರು: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸ್ಥಾಪಿಸಲಾಗಿರುವ ಇನ್ಸ್ ಟಿಟ್ಯೂಟ್ ಆಫ್ ಗ್ಯಾಸ್ಟ್ರೋ ಎಂಟ್ರಾಲಜಿ ವಿಜ್ಞಾನ ಮತ್ತು ಅಂಗಾಂಗ ಕಸಿ ವಿಭಾಗವನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವಿಯಾ ಉದ್ಘಾಟಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಸಂಸದ ಪಿ.ಸಿ. ಮೋಹನ್, ಸಂಸ್ಥೆಯ ನಿರ್ದೇಶಕ ಡಾ. ನಾಗೇಶ್ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ಮನ್ಸುಖ್ ಮಾಂಡವಿಯಾ, ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಯಕೃತ್ ಸೇರಿದಂತೆ ವಿವಿಧ ಅಂಗಾಂಗಗಳ ಕಸಿಯನ್ನು ಉಚಿತವಾಗಿ ಮಾಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಚಿಕಿತ್ಸೆ ಎಂದರೆ ಕೇವಲ ದೈಹಿಕ ಸಮಸ್ಯೆಗಳಿಗೆ ಮಾತ್ರವಲ್ಲ, ಸಮಗ್ರ ಚಿಕಿತ್ಸೆ ಇಂದಿನ ಅಗತ್ಯವಾಗಿದೆ. ನಾಗರಿಕರು ಆರೋಗ್ಯವಂತರಾಗಿದ್ದರೆ ಮಾತ್ರ ದೇಶ ಪ್ರಗತಿಪಥದತ್ತ ಸಾಗಲು ಸಾಧ್ಯ ಎಂದು ಪ್ರತಿಪಾದಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಕೋವಿಡ್ ಲಸಿಕೆ ಅಭಿಯಾನ ತೀವ್ರಗೊಳಿಸಲು ಮಾಸಿಕ 1 ಕೋಟಿ ಲಸಿಕೆ ನೀಡುವಂತೆ ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ಮಾಡಿದ ಮನವಿಗೆ ಸೂಕ್ತ ಸ್ಪಂದನೆ ದೊರೆತಿದ್ದು, ಪ್ರತಿ ತಿಂಗಳು 1 ಕೋಟಿ 50 ಲಕ್ಷ ಡೋಸ್ ಲಸಿಕೆಯನ್ನು ಮಂಜೂರು ಮಾಡಿದ್ದಾರೆ. ರಾಜ್ಯವನ್ನು ಆರೋಗ್ಯ ಕರ್ನಾಟಕವನ್ನಾಗಿ ಮಾಡಲು ಸಂಕಲ್ಪತೊಟ್ಟಿದ್ದು, ಈ ನಿಟ್ಟಿನಲ್ಲಿ ಪ್ರಯತ್ನಗಳು ಮುಂದುವರಿದಿವೆ. ಆಹಾರ, ನೀರು, ಜೀವನಶೈಲಿಯಲ್ಲಿ ಸಾಕಷ್ಟು ಆರೋಗ್ಯ ಸಮಸ್ಯೆಗಳು ಸೃಷ್ಟಿಯಾಗುತ್ತಿದ್ದು, ಎಲ್ಲದಕ್ಕೂ ಈ ಸಂಸ್ಥೆ ಪರಿಹಾರ ಒದಗಿಸಲಿದೆ ಎಂದರು. ರಾಜೀವ್ ಗಾಂಧಿ ಎದೆರೋಗ ಸಂಸ್ಥೆಯಲ್ಲಿ ಮಾಡ್ಯುಲರ್ ಆಸ್ಪತ್ರೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಮಧ್ಯಾಹ್ನ ನಿಮ್ಹಾನ್ಸ್ ಗೆ ಭೇಟಿ ನೀಡಲಿರುವ ಅವರು, ಬಳಿಕ ನಿಮ್ಹಾನ್ಸ್ ಸಂಸ್ಥೆಯ ಘಟಿಕೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ ಬಸವನಗುಡಿಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.