ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಗೆ ಮೊದಲಿದ್ದ ಉತ್ಸಾಹ, ಶಕ್ತಿ, ಆರೋಗ್ಯ ಸರಿಯಿಲ್ಲದ ಕಾರಣ ವರಿಷ್ಠರು ಅವರ ನಾಯಕತ್ವವನ್ನು ಬದಲಾಯಿಸಿ ಬೇರೊಬ್ಬರಿಗೆ ನೀಡಲಿ ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ಬದಲಾಯಿಸುವಂತೆ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಬಾಂಬ್ ಸಿಡಿಸಿದ್ದಾರೆ.
ಬಿಜೆಪಿ ಪಕ್ಷದ ಕಚೇರಿಯಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿಯಾದ ಬಳಿಕ ಮಾತನಾಡಿದ ಅವರು, ಈ ಹಿಂದೆ ಯಡಿಯೂರಪ್ಪ ಅವರಿಗೆ ಪಕ್ಷವನ್ನು ಸಂಘಟಿಸಿ ಅಕಾರಕ್ಕೆ ತರಬೇಕೆಂಬ ಉತ್ಸಾಹ, ಶಕ್ತಿ ಇತ್ತು. ಈಗ ಅವರಿಗೆ ವಯಸ್ಸಾಗಿದೆ. ಹೀಗಾಗಿ ಮುಖ್ಯಮಂತ್ರಿ ಸ್ಥಾನದಿಂದ ಬದಲಾಯಿಸಿ ಬೇರೊಬ್ಬರಿಗೆ ನೀಡಲಿ ಎಂದು ಆಗ್ರಹಿಸಿದರು.
ಸಾಮಾನ್ಯ ಜ್ಞಾನ ಇರುವವರು ರಾಜ್ಯದ ಮುಖ್ಯಮಂತ್ರಿಯಾಗಲಿ. ರಾಜ್ಯದ ಹಿತದೃಷ್ಟಿಯಿಂದ ಯಡಿಯೂರಪ್ಪ ಕುರ್ಚಿ ಬಿಟ್ಟರೆ ಒಳ್ಳೆಯರು. ಆಡಳಿತ ನಡೆಸಲು ಸಾಧ್ಯವಿಲ್ಲದಿದ್ದಾಗ ಮುಂದುವರೆಯುವುದು ಸರಿಯಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗಬೇಕೆಂದು ಹಲವರ ಒತ್ತಾಸೆಯಾಗಿದೆ. ಕೆಲವರು ನೇರವಾಗಿ ಹೇಳದಿದ್ದರೂ ಪರೋಕ್ಷವಾಗಿ ಈ ಬೇಡಿಕೆಯನ್ನು ಮುಂದಿಟ್ಟಿದ್ದಾರೆ. ಬಿಎಸ್‍ವೈ ಅಧಿಕಾರದಿಂದ ಕೆಳಗಿಳಿದರೆ ವೀರಶೈವ ಲಿಂಗಾಯಿತ ಪಂಚಮಸಾಲಿ ಸಮುದಾಯದವರೇ ಮುಖ್ಯಮಂತ್ರಿಯಾಗಲಿ ಎಂದು ಹೇಳಿದ್ದಾರೆ.