ಶಿವಮೊಗ್ಗ: ಜಿಲ್ಲೆಯಲ್ಲಿ ನಡೆಯುತ್ತಿರುವ ಪ್ರಧಾನಿ ಮೋದಿ ಅವರ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುವುದಾಗಿ ಹೇಳಿಕೆ ನೀಡಿದ್ದ ಭದ್ರಾವತಿಯಲ್ಲಿ ವಿಐಎಸ್‌ಎಲ್ ಕಾರ್ಖಾನೆ ಮುಚ್ಚಬಾರದು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕಾರ್ಮಿಕರು ಮತ್ತು ಕಾರ್ಮಿಕ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಭದ್ರಾವತಿಯಿಂದ ಶಿವಮೊಗ್ಗದವರೆಗೆ ಮೆರವಣಿಗೆ ಮಾಡಿ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುವುದಾಗಿ ಭದ್ರಾವತಿ ವಿಐಎಸ್’ಎಲ್ ಕಾರ್ಖಾನೆ ಉಳಿಸಿ ಹೋರಾಟಗಾರರು ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಭಟನನಿರತ ಕಾರ್ಮಿಕರು ಸ್ಥಳದಿಂದ ಕದಲದಂತೆ ಅವರ ಸುತ್ತಲೂ ಪೊಲೀಸರನ್ನು ನಿಯೋಜಿಸಲಾಗಿದೆ. ಮುಂಜಾಗೃತಾ ಕ್ರಮವಾಗಿ ಹಲವು ಕಾರ್ಮಿಕ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ.
ಸೋಮವಾರ ಬೆಳಗಿನ ಜಾವ 3 ಗಂಟೆ ವೇಳೆಗೆ 20ಕ್ಕೂ ಹೆಚ್ಚು ಕಾರ್ಮಿಕ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ. ವಿಐಎಸ್’ಎಲ್ ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್, ಕಾರ್ಯದರ್ಶಿ ರಾಕೇಶ್ ಸೇರಿದಂತೆ 20ಕ್ಕೂ ಹೆಚ್ಚು ಜನರು ಪೊಲೀಸ್ ವಶದಲ್ಲಿದ್ದಾರೆ ಎಂದು ತಿಳಿದುಬಂದಿದೆ.