ಕೇರಳ: ಕೇರಳದ ವಿಝಿಂಜಮ್ ಪ್ರದೇಶದಲ್ಲಿ ಅದಾನಿ ಬಂದರು ಯೋಜನೆಯ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ವೇಳೆ ಉಂಟಾದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 3000ಕ್ಕೂ ಅಧಿಕ ಮಂದಿಯ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಪೊಲೀಸ್ ಠಾಣೆಯನ್ನು ಧ್ವಂಸಗೊಳಿಸಿ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ್ದ ಘಟನೆಗೆ ಸಂಬಂಧಿಸಿದಂತೆ 3000 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆಯಲ್ಲಿ 36 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು ಎಂದು ಮೂಲಗಳು ತಿಳಿಸಿವೆ.
ಕೇರಳದ ವಿಝಿಂಜಮ್’ನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮೆಟ್ರೋಪಾಲಿಟನ್ ಆರ್ಚ್ ಬಿಷಪ್ ಥಾಮಸ್ ಜೆ ನೆಟ್ಟೊ ಮತ್ತು ಪೆರೇರಾ ಸೇರಿದಂತೆ ಕನಿಷ್ಠ 15 ಲ್ಯಾಟಿನ್ ಕ್ಯಾಥೋಲಿಕ್ ಪಾದ್ರಿಗಳ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಈ ಘಟನೆಯಲ್ಲಿ ಗಾಯಗೊಂಡ 36 ಪೊಲೀಸ್ ಸಿಬ್ಬಂದಿಯನ್ನು ತಿರುವನಂತಪುರಮ್’ನ ವಿವಿಧ ಆಸ್ಪತ್ರೆಗಳಿಗೆ ಸೇರಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಎಂ.ಆರ್. ಅಜಿತ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದಾಗ ಪೊಲೀಸರು ಪ್ರತಿಭಟನಕಾರರ ಗುಂಪನ್ನು ಚದುರಿಸಲು ಲಾಠಿ ಚಾರ್ಜ್ ಮತ್ತು ಅಶ್ರುವಾಯು ಪ್ರಯೋಗಿಸಬೇಕಾಯಿತು ಎಂದು ಅವರು ತಿಳಿಸಿದರು.
ಸದ್ಯ ಈ ಪ್ರದೇಶದಲ್ಲಿ ಸುಮಾರು 600 ಪೊಲೀಸರನ್ನು ನಿಯೋಜಿಸಲಾಗಿದ್ದು, 300 ಪೊಲೀಸರನ್ನು ಹೆಚ್ಚುವರಿಯಾಗಿ ತರಿಸಲಾಗಿದೆ ಎಂದು ಕುಮಾರ್ ಹೇಳಿದರು.