ನವದೆಹಲಿ: ವರ್ಷಾಂತ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯನ್ನು ತೀವ್ರವಾಗಿ ಪರಿಷ್ಕರಣೆ ಮಾಡುವ ಕೇಂದ್ರ ಚುನಾವಣಾ ಆಯೋಗದ ಕ್ರಮದ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ಸಮ್ಮತಿಸಿದೆ.
ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಹಾಗೂ ಜೊಯ್ಮಲ್ಯ ಬಾಗ್ಚಿ ಅವರಿದ್ದ ಪೀಠದೆದುರು, ರಾಜ್ಯ ಸಭಾ ಸದಸ್ಯ, ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಅರ್ಜಿದಾರರ ಪರವಾಗಿ ತುರ್ತು ವಿಚಾರಣೆಗೆ ಮನವಿ ಮಾಡಿದರು.
ವಿಚಾರಣೆಯನ್ನು ಗುರುವಾರ (ಜುಲೈ 10ರಂದು) ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಪೀಠ ಹೇಳಿದೆ.
ಸ್ವಯಂ ಸೇವಾ ಸಂಸ್ಥೆಗಳಾದ ಎಡಿಆರ್, ಪಿಯುಸಿಎಲ್, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ, ಸಾಮಾಜಿಕ ಹೋರಾಟಗಾರರಾದ ಯೋಗೇಂದ್ರ ಯಾದವ್ ಸೇರಿ ಹಲವರು ಆಯೋಗದ ಕ್ರಮವನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದ್ದಾರೆ. ಲಕ್ಷಾಂತರ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡುವ ಪ್ರಯತ್ನ ಇದು ಎಂದು ಎಡಿಆರ್ ಆತಂಕ ವ್ಯಕ್ತಪಡಿಸಿದೆ.
