ಲಖನೌ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ತಮಗೆ ಆಹ್ವಾನವೇ ಇಲ್ಲ.. ಹೀಗಿರುವಾಗ ಹೇಗೆ ಹೋಗುವುದು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ, ಮಾಜಿ ಸಿಎಂ ಅಖಿಲೇಶ್ ಯಾದವ್ ಹೇಳಿದ್ದಾರೆ.
ಮಧ್ಯೆ ಭಾರತ ಜೋಡೋ ನ್ಯಾಯ್ ಯಾತ್ರೆಯು ಉತ್ತರ ಪ್ರದೇಶಕ್ಕೆ ಪ್ರವೇಶಿಸಿದಾಗ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆಯೇ ಎಂದು ಅಖಿಲೇಶ್ ಯಾದವ್ ಅವರನ್ನು ಮಾಧ್ಯಮದವರು ಕೇಳಿದಾಗ, ಆಹ್ವಾನವೇ ಇಲ್ಲ, ಹೇಗೆ ಪಾಲ್ಗೊಳ್ಳುವುದು ಎಂದು ಕೇಳಿದ್ದಾರೆ.
ಕಾಂಗ್ರೆಸ್ ಸಂಸದ ಮತ್ತು ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೊಡೊ ನ್ಯಾಯ ಯಾತ್ರೆಯು ಪ್ರಸ್ತುತ ಜಾರ್ಖಂಡ್ ನಲ್ಲಿದ್ದು, ಮುಂಬೈನಲ್ಲಿ ಮುಕ್ತಾಯಗೊಳ್ಳುವ ಮೊದಲು ಮತ್ತಷ್ಟು ಪಶ್ಚಿಮ ರಾಷ್ಟ್ರಗಳಲ್ಲಿ ಸಾಗಲಿದೆ. ಈ ನಡುವೆ ಮೈತ್ರಿಕೂಟದ ಪ್ರಮುಖ ಪಕ್ಷಗಳ ನಿರ್ಗಮನದ ನಂತರ ‘INDIA’ ಒಕ್ಕೂಟವನ್ನು ಮುಂದಕ್ಕೆ ಕೊಂಡೊಯ್ಯಲು ಕಾಂಗ್ರೆಸ್ ಸತತ ಪ್ರಯತ್ನಗಳನ್ನು ನಡೆಸುತ್ತಿದ್ದರೆ, ನಿತೀಶ್ ಕುಮಾರ್ ನೇತೃತ್ವದ ಜನತಾ ದಳ-ಯುನೈಟೆಡ್ ಬಿಜೆಪಿ ನೇತೃತ್ವದ ಎನ್ಡಿಎಗೆ ಜಾರಿದೆ. ಅಂತೆಯೇ ಮೈತ್ರಿಕೂಟದ ಎರಡು ಪ್ರಮುಖ ಪಾಲುದಾರ ಪಕ್ಷಗಳಾದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಮತ್ತು ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ (ಎಎಪಿ) ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಳ್ಳುವುದನ್ನು ತಳ್ಳಿಹಾಕಿದೆ.