ಜಾತಿ ಜನಗಣತಿಯನ್ನು ದಾಳವಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ವಿರೋಧವಿದೆ: ಆರ್.ಅಶೋಕ್

Prasthutha|

ಬೆಂಗಳೂರು: ಇದೇ ಅಕ್ಟೋಬರ್ 18ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ 2015ರ ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ಯ (ಜಾತಿ ಗಣತಿ) ವರದಿಯ ಕುರಿತು ಚರ್ಚಿಸಲು ಸರ್ಕಾರ ನಿರ್ಧರಿಸಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

- Advertisement -


ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಜಾತಿ ಜನಗಣತಿ ಬಗ್ಗೆ ಬಿಜೆಪಿಗೆ ಯಾವುದೇ ತಕರಾರು ಇಲ್ಲ ಅಥವಾ ವಿರೋಧವೂ ಇಲ್ಲ. ತಳ ಸಮುದಾಯಗಳನ್ನು ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂಬ ಸಾಮಾಜಿಕ ನ್ಯಾಯದ ಬದ್ಧತೆ ಬಿಜೆಪಿಯ ಮೂಲಸಿದ್ಧಾಂತ ‘ಅಂತ್ಯೋದಯ’ ಪರಿಕಲ್ಪನೆಯಲ್ಲೇ ಅಡಗಿದೆ. ಅದನ್ನು ಸಾಕಾರಗೊಳಿಸುವ ಯಾವ ಕ್ರಮಕ್ಕಾದರೂ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ’ ಎಂದು ಅವರು ಹೇಳಿದ್ದಾರೆ.


ರಾಜಕೀಯ ಚದುರಂಗದ ಆಟದಲ್ಲಿ ಜಾತಿ ಜನಗಣತಿಯನ್ನು ದಾಳವಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ವಿರೋಧವಿದೆ. ರಾಜಕೀಯ ಎಂಬ ಹಾವು–ಏಣಿ ಆಟದಲ್ಲಿ ಕೆಳಗೆ ಬಿದ್ದಾಗ ಮೇಲೇಳಲು, ಕುರ್ಚಿ ಉಳಿಸಿಕೊಳ್ಳಲು ಜಾತಿಗಣತಿಯನ್ನು ಏಣಿಯಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ತಕರಾರಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -


ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಿರುವ ಅಶೋಕ ಸಚಿವ ಸಂಪುಟ ಸಭೆಗೂ ಮುನ್ನ ಉತ್ತರಿಸುವಂತೆ ಆಗ್ರಹಿಸಿದ್ದಾರೆ.

‘ತಮಗೆ ನಿಜವಾಗಿಯೂ ಜಾತಿಗಣತಿಯ ಬಗ್ಗೆ ಬದ್ಧತೆ ಇದ್ದಿದ್ದರೆ, 2018ರಲ್ಲೇ ಕಾಂತರಾಜು ವರದಿಯನ್ನು ಏಕೆ ಸ್ವೀಕರಿಸಿ ಜಾರಿ ಮಾಡಲಿಲ್ಲ?, ಹತ್ತು ವರ್ಷಗಳ ಹಿಂದೆ ಕೈಗೊಂಡ ಜಾತಿ ಜನಗಣತಿ ವೈಜ್ಞಾನಿಕವಾಗಿ ನಡೆದಿಲ್ಲ, ಅನೇಕ ಜನರ ಮನೆಗಳಿಗೆ ಭೇಟಿಯೇ ನೀಡಿಲ್ಲ ಎಂಬ ದೂರುಗಳಿವೆ. ಹೀಗಿರುವಾಗ ಈ ವರದಿಯನ್ನು ಈಗ ಮುನ್ನೆಲೆಗೆ ತರುವ ತರಾತುರಿ ಏಕೆ’ ಎಂದು ಪ್ರಶ್ನಿಸಿದ್ದಾರೆ.

‘ಈ ಅವೈಜ್ಞಾನಿಕ ಜಾತಿ ಜನಗಣತಿ ವರದಿ ಸ್ವೀಕರಿಸದಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದೆ. ಇದನ್ನು ಬೆಂಬಲಿಸಿ ಸ್ವತಃ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರಾ ಡಿ.ಕೆ ಶಿವಕುಮಾರ್‌ ಅವರೇ ಸಹಿ ಹಾಕಿದ್ದಾರೆ. ತಮ್ಮದೇ ಪಕ್ಷದ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಅವರೂ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಅನೇಕ ಮಠಾಧೀಶರು, ಧಾರ್ಮಿಕ ಮುಖಂಡರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಿರುವಾಗ ಕಳೆದು 17 ತಿಂಗಳಿನಿಂದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಂದು ಸರ್ವಸಮ್ಮತವಾದ ನಿಲುವಿಗೆ ಬರುವ ಬದಲು ಈಗ ದಿಢೀರನೆ ಏಕಾಏಕಿ ವರದಿ ಸ್ವೀಕರಿಸಲು ಮುಂದಾಗಿರುವುದು ಯಾವ ಕಾರಣಕ್ಕೆ?’ ಎಂದು ಕಿಡಿಕಾರಿದ್ದಾರೆ.

‘ಹಗರಣಗಳ ಸುಳಿಯಲ್ಲಿ ಸಿಲುಕಿ ಮುಜುಗರ ಅನುಭವಿಸುತ್ತಿರುವ ಪರಿಸ್ಥಿತಿಯಿಂದ ಜನರ ಗಮನ ಬೇರೆಡೆ ಸೆಳೆಯಲು ಜಾತಿಗಣತಿ ವರದಿಯನ್ನು ಒಂದು ದಾಳವಾಗಿ ಬಳಸಲಾಗುತ್ತಿದೆಯೇ?, ಜಾತಿಗಣತಿಯನ್ನು ರಾಜಕೀಯ ದಾಳವಾಗಿ ಬಳಸುವುದು ದಲಿತರಿಗೆ, ಹಿಂದುಳಿದ ವರ್ಗಗಳಿಗೆ, ತಳ ಸಮುದಾಯಗಳಿಗೆ ಮಾಡುವ ಅಪಮಾನವಲವೇ? ಸಾಮಾಜಿಕ ನ್ಯಾಯ ಎಂಬ ಪವಿತ್ರ ಪರಿಕಲ್ಪನೆಯನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವುದು ಆತ್ಮವಂಚನೆ ಅಲ್ಲವೇ?’ ಎಂದು ಅಶೋಕ ಗುಡುಗಿದ್ದಾರೆ.

ಅಕ್ಟೋಬರ್ 18ರಂದು ನಡೆಯುವ ಸಂಪುಟ ಸಭೆಗೂ ಮುನ್ನ ಮುಖ್ಯಮಂತ್ರಿಗಳ ‘ಆತ್ಮಸಾಕ್ಷಿ’ ಈ ಪ್ರಶ್ನೆಗಳನ್ನ ಆತ್ಮಾವಲೋಕನ ಮಾಡಿ ಉತ್ತರ ನೀಡುತ್ತದೆ ಎಂದು ನಿರೀಕ್ಷಿಸುತ್ತೇನೆ ಎಂದು ಆರ್‌.ಅಶೋಕ ಹೇಳಿದ್ದಾರೆ.



Join Whatsapp