ವೈದ್ಯಕೀಯ, ದಂತ ವೈದ್ಯಕೀಯ ಕಾಲೇಜುಗಳಲ್ಲಿ ಶುಲ್ಕ ಹೆಚ್ಚಳ : ವೆಲ್ಫೇರ್ ಪಾರ್ಟಿ ಖಂಡನೆ

Prasthutha|

ಬೆಂಗಳೂರು : ಪ್ರಸಕ್ತ ಸಾಲಿನಲ್ಲಿ ಖಾಸಗಿ ಕಾಲೇಜುಗಳಲ್ಲಿ ವೈದ್ಯಕೀಯ ಮತ್ತು ದಂತವೈದ್ಯಕೀಯ ಕೋರ್ಸ್‌ಗಳ ಶುಲ್ಕವನ್ನು ರಾಜ್ಯ ಸರ್ಕಾರ ಹೆಚ್ಚಿಸಿದೆ. ಖಾಸಗಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾ ಸೀಟುಗಳ ಶುಲ್ಕ ಶೇ. 15 ರಷ್ಟು, ಆಡಳಿತ ಮಂಡಳಿ ಕೋಟಾ (ಖಾಸಗಿ) ಸೀಟುಗಳ ಶುಲ್ಕ ಶೇ 25ರಷ್ಟು ಏರಿಸಿರುವ ಕ್ರಮಕ್ಕೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ತಾಹೀರ್ ಹುಸೇನ್ ಖಂಡನೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ಖಾಸಗಿ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಯೊಂದಿಗೆ ಈ ಕುರಿತ ಒಪ್ಪಂದಕ್ಕೆ ಸಹಿ ಮಾಡಿದ ನಂತರ, ರಾಜ್ಯಸರ್ಕಾರ ಈ ನಿರ್ಧಾರ ಪ್ರಕಟಿಸಿದೆ ಎಂದು ಹೇಳಿದ್ದಾರೆ.

- Advertisement -

ಈ ನಿರ್ಧಾರದ ಪರಿಣಾಮ, 2020-21ನೇ ಶೈಕ್ಷಣಿಕ ವರ್ಷದಲ್ಲಿ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದ ಸೀಟುಗಳ ಶುಲ್ಕ ರೂ. 1,28,746, ಖಾಸಗಿ ಕೋಟಾದ ಸೀಟುಗಳ ಶುಲ್ಕ ರೂ. 9,81,956ಕ್ಕೆ ಏರಿದೆ.

ದಂತ ವೈದ್ಯಕೀಯ ಕಾಲೇಜುಗಳಲ್ಲಿ ಶುಲ್ಕದ ಮೊತ್ತ ಕ್ರಮವಾಗಿ ರೂ. 83,356 ಹಾಗೂ ರೂ. 6,66,023ಕ್ಕೆ ಏರಿಸಲಾಗಿದೆ. ‘ರಾಜ್ಯದಲ್ಲಿನ ಬಹುತೇಕ ವೈದ್ಯಕೀಯ ಕಾಲೇಜುಗಳು ರಾಜಕಾರಣಿಗಳಿಗೆ ಸೇರಿವೆ. ಅಂತಹ ಕಾಲೇಜುಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿರಬಹುದು’ ಎಂದು ತಾಹೀರ್ ಹುಸೇನ್ ಆಪಾದಿಸಿದ್ದಾರೆ.

- Advertisement -