ಕಲಬುರಗಿ: ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ನಡೆದ ತಕ್ಷಣ ಅಲ್ಲಿಗೆ ಭೇಟಿ ನೀಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಯರನ್ನು ಯಾವಾಗ ಭೇಟಿ ಮಾಡುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆರ್. ಅಶೋಕಣ್ಣ, ಬಿ.ವೈ.ವಿಜಯೇಂದ್ರ ಅವರು ಯಾವಾಗ ಭೇಟಿ ಕೊಡುತ್ತಾರೆ? ಹುಬ್ಬಳ್ಳಿ ವಿದ್ಯಾರ್ಥಿನಿ ಕೊಲೆ ಖಂಡಿಸಿ ಪ್ರತಿ ಜಿಲ್ಲೆ, ತಾಲ್ಲೂಕುಗಳಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದ ಬಿಜೆಪಿ ಕಾರ್ಯಕರ್ತರು ಹಾಸನ ಘಟನೆಗೂ ತಮಗೂ ಸಂಬಂಧವಿಲ್ಲದಂತೆ ಬಾಯಿಮುಚ್ಚಿಕೊಂಡು ಕುಳಿತಿದ್ದು ಏಕೆ? ಬಿಜೆಪಿ ಜಾಲತಾಣದವರು ಪ್ರಜ್ವಲ್ ವಿರುದ್ಧ ಹ್ಯಾಷ್ ಟ್ಯಾಗ್ ಬಳಸಿ ಅವರ ಕೃತ್ಯ ವಿರೋಧಿಸುತ್ತಿಲ್ಲವೇಕೆ ಎಂದರು.
ಜನವರಿಯಲ್ಲಿಯೇ ಬಿಜೆಪಿ ಮುಖಂಡ ದೇವರಾಜೇಗೌಡ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯ ಅಧ್ಯಕ್ಷರಿಗೆ ಪತ್ರ ಬರೆದು ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೊ ಇರುವ ಬಗ್ಗೆ ತಿಳಿಸಿದ್ದರು. ಆದರೂ ಮೈತ್ರಿ ಪಕ್ಷದ ಅಭ್ಯರ್ಥಿ ಪ್ರಜ್ವಲ್ ಅವರಿಗೆ ಟಿಕೆಟ್ ನೋಡಲು ಮೋದಿ ಅವರು ಒಪ್ಪಿಕೊಂಡಿದ್ದು ಹೇಗೆ ಎಂದು ಪ್ರಶ್ನಿಸಿದರು.