ಬೆಂಗಳೂರು: ಕಾಂಗ್ರೆಸ್ ಪಕ್ಷದ 45 ಪ್ರಮುಖ ನಾಯಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂದ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಆಪರೇಷನ್ ಕಮಲಕ್ಕೆ ಎಲ್ಲಿಂದ ಹಣ ಬರುತ್ತಿದೆ? ಇದಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರೇ ಉತ್ತರ ನೀಡಲಿ ಎಂದು ಹೇಳಿದ್ದಾರೆ.
ಬಗ್ಗೆ ಪ್ರತಿಕ್ರಿಯೆ ನೀಡಿದ ಪ್ರಿಯಾಂಕ್ ಖರ್ಗೆ, ಮೊದಲು ಅವರ ಶಾಸಕರು, ಸಂಸದರನ್ನು ಸಂಪರ್ಕದಲ್ಲಿ ಇಟ್ಟುಕೊಳ್ಳಲಿ. ಬಳಿಕ ಕಾಂಗ್ರೆಸ್ ಶಾಸಕರ ಬಗ್ಗೆ ಮಾತನಾಡಲಿ ಎಂದರು. ಅಲ್ಲದೆ, ಒಂದು ದಿನ ಅಲ್ಲ ಒಂದು ತಿಂಗಳ ಸಮಯ ನೀಡುತ್ತೇನೆ. 45 ಶಾಸಕರಲ್ಲ, ನಾಲ್ಕು ಜನ ಶಾಸಕರನ್ನು ಕರೆದುಕೊಂಡು ಹೋಗಿ ನೋಡೋಣ ಎಂದು ಸವಾಲು ಹಾಕಿದರು.
ಆರ್ ಎಸ್ ಎಸ್ನವರು ಯಾವುದೇ ಪಕ್ಷದ ಜೊತೆ ಗುರುತಿಸಿಕೊಂಡಿಲ್ಲ ಎಂದು ಹೇಳುತ್ತಾರೆ. ಆದರೆ ಬಿಜೆಪಿ ಪಕ್ಷದಲ್ಲಿ ಹೋಗಿ ಪಾಠ ಹೇಳುತ್ತಾರೆ ಎಂದು ಹೇಳಿದ ಪ್ರಿಯಾಂಕ್ ಖರ್ಗೆ, ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಲಿಂಗಾಯತ ಸಮುದಾಯಕ್ಕೆ ಟಿಕೆಟ್ ನೀಡಲಿಲ್ಲ. ಸಂತೋಷ್ ಪಡೆ ಕಟ್ಟಲು ಲಿಂಗಾಯತರಿಗೆ ಟಿಕೆಟ್ ನೀಡಿಲ್ಲ. ಅದು ವಿಫಲವಾಯಿತು ಎಂದು ನಿಮ್ಮ ಮಾಜಿ ಶಾಸಕರು ಹೇಳುತ್ತಿದ್ದಾರೆ. ಅದಕ್ಕೆ ಮೊದಲು ಸಂತೋಷ್ ಉತ್ತರ ನೀಡಲಿ, ನಂತರ ಶಾಸಕರ ಬಗ್ಗೆ ಮಾತನಾಡಲಿ ಎಂದರು.