ಬೆಂಗಳೂರು: ಮೃತ ಪ್ರವೀಣ್ ನೆಟ್ಟಾರ್ ಒಂದಷ್ಟು ಕಾಲ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಕಾರಿಗೆ ಚಾಲಕನೂ ಆಗಿದ್ದರಂತೆ. ಇಷ್ಟೊಂದು ಆತ್ಮೀಯರಾಗಿದ್ದವರು ದೂರವಾಗಿರುವುದು ಯಾಕೆ. ಪೊಲೀಸರು ನಳಿನ್ ಕುಮಾರ್ ಕಟೀಲ್ ವಿಚಾರಣೆ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಹಿಂದುಗಳು ಸತ್ತರೆ ಮುಸ್ಲಿಮರ ಮೇಲೆ, ಮುಸ್ಲಿಮರು ಸತ್ತರೆ ಹಿಂದುಗಳ ಮೇಲೆ ಸಂಶಯ ಪಡುವುದು ಸಾಮಾನ್ಯವಾಗಿಬಿಟ್ಟಿದೆ. ಪೊಲೀಸ್ ತನಿಖೆಯೂ ಇದೇ ಜಾಡಿನಲ್ಲಿ ಸಾಗುತ್ತಿರುವುದರಿಂದ ಸಾವಿನ ಹಿಂದಿನ ಅಸಲಿ ಸತ್ಯ ಹೊರಗೆ ಬರದೆ ಮುಚ್ಚಿಹೋಗುತ್ತಿದೆ. ಪೊಲೀಸರು ಅವರನ್ನು ವಿಚಾರಣೆಗೊಳಪಡಿಸಿದರೆ ದುಷ್ಕರ್ಮಿಗಳ ಪತ್ತೆಗೆ ನೆರವಾದೀತು ಎಂದು ಹೇಳಿದ್ದಾರೆ.
ಹತ್ಯೆ ನಡೆಸಿರುವ ದುಷ್ಕರ್ಮಿಗಳು ಯಾವುದೇ ಪಕ್ಷ, ಜಾತಿ, ಧರ್ಮ ಇಲ್ಲವೇ ಸಂಘಟನೆಗಳಿಗೆ ಸೇರಿದ್ದರೂ ಮುಲಾಜಿಲ್ಲದೆ ಅವರನ್ನು ಬಂಧಿಸಿ ಜೈಲಿಗಟ್ಟಬೇಕು. ಯಾವುದಾದರೂ ಸಂಘಟನೆ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುತ್ತಿದ್ದರೆ ಅವುಗಳನ್ನು ನಿಷೇಧಿಸುವ ದಿಟ್ಟತನವನ್ನು ರಾಜ್ಯ ಸರ್ಕಾರ ತೋರಬೇಕು.
ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಅವರು ಬಹಿರಂಗವಾಗಿ ಮುಸ್ಲಿಮರ ಬಗ್ಗೆ ಬೆಂಕಿ ಕಾರಿದರೂ, ಮುಸ್ಲಿಂ ಉದ್ಯಮಿಗಳ ಜೊತೆ ಅವರಿಗೆ ಹಾರ್ದಿಕ ಸಂಬಂಧ ಇರುವುದನ್ನು ಅವರೇ ಹಲವಾರು ಬಾರಿ ಬಹಿರಂಗ ಸಭೆಯಲ್ಲಿ ಹೇಳಿಕೊಂಡಿದ್ದಾರೆ. ಈ ಸಂಬಂಧಗಳು ಕೇವಲ ಸಾಮಾಜಿಕವಾದುದ್ದೇ? ಇಲ್ಲವೇ ವ್ಯಾಪಾರ ವಹಿವಾಟಿನದ್ದೇ ಎಂದು ಪ್ರಶ್ನಿಸಿದ್ದಾರೆ.