ತಿರುವನಂತಪುರ: ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಸೇರಿದಂತೆ ಇತರೆ ರಾಜಕೀಯ ಪಕ್ಷದವರನ್ನು ಭ್ರಷ್ಟರು ಎಂದು ಕರೆಯುತ್ತಾರೆ. ಆದರೆ, ಅವರನ್ನೇ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುತ್ತಾರೆ. ಹಾಗಾಗಿ ಬಿಜೆಪಿಗರು ಹೇಳುವುದಕ್ಕೂ ಮಾಡುವುದಕ್ಕೂ ವ್ಯತ್ಯಾಸವಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ತಿರುವನಂತಪುರದಲ್ಲಿ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೂ ಮುನ್ನ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ‘ಕೇರಳದಲ್ಲಿ ಕಾಂಗ್ರೆಸ್ಗೆ ಹೆಚ್ಚು ಜನಬೆಂಬಲಿದೆ. ಹಾಗಾಗಿ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿದೆ’ ಎಂದು ಹೇಳಿದ್ದಾರೆ.
‘ಕಾಂಗ್ರೆಸ್ ಸೇರಿದಂತೆ ಇತರೆ ವಿರೋಧ ಪಕ್ಷಗಳ ನಾಯಕರನ್ನು ಭ್ರಷ್ಟರು ಎಂದು ಸದಾ ಟೀಕಿಸುವ ಪ್ರಧಾನಿ ಮೋದಿಯವರಿಗೆ ಗೆಲ್ಲುವು ವಿಶ್ವಾಸವಿದ್ದರೆ ಭ್ರಷ್ಟರನ್ನೇ ನಿಮ್ಮ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆ ಮಾಡಿಕೊಳ್ಳುವುದೇಕೆ’ ಎಂದು ಖರ್ಗೆ ಪ್ರಶ್ನಿಸಿದ್ದಾರೆ.