Home ಟಾಪ್ ಸುದ್ದಿಗಳು ಪ್ರಾದೇಶಿಕ ಭಾಷೆಗಳ ಮೇಲೆ ಯಾಕೆ ಈ ಪರಿ ದ್ವೇಷ: ಶಾ ವಿರುದ್ಧ ಕುಮಾರಸ್ವಾಮಿ ಕಿಡಿ

ಪ್ರಾದೇಶಿಕ ಭಾಷೆಗಳ ಮೇಲೆ ಯಾಕೆ ಈ ಪರಿ ದ್ವೇಷ: ಶಾ ವಿರುದ್ಧ ಕುಮಾರಸ್ವಾಮಿ ಕಿಡಿ

ಬೆಂಗಳೂರು: ಹಿಂದಿ ಭಾಷೆಯ ಕುರಿತ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಜೆಡಿಎಸ್ ಮುಖಂಡ ಕುಮಾರಸ್ವಾಮಿ, ಕೇಂದ್ರ ಸರ್ಕಾರ ದೇಶದೆಲ್ಲೆಡೆ ಹಿಂದಿ ಹೇರಿಕೆಯ ವಿರುದ್ಧ ನಡೆಸುವ ಅಭಿಯಾನಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡು ಕಳೆದ 75 ವರ್ಷಗಳಿಂದ ಒಂದೇ ತಾಯಿಯ ಮಕ್ಕಳಂತೆ ರಾಜ್ಯಗಳ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹುಳಿ ಹಿಂಡಿ, ಹಿಂದಿ ಹೇರಿಕೆಯ ಹೇಳಿಕೆ ನೀಡುತ್ತಿರುವುದು ಆಘಾತಕಾರಿ ಎಂದು ಕಿಡಿಕಾರಿದ್ದಾರೆ.

ಪ್ರತಿಯೊಂದಕ್ಕೂ ಹಿಂದುತ್ವದ ಜಪ ಮಾಡಿ ಭಾವನಾತ್ಮಕ ವಿಷಯಗಳನ್ನು ಮುನ್ನೆಲೆಗೆ ತಂದು ಸಮಾಜ ಮತ್ತು ಜನರನ್ನು ಒಡೆಯುತ್ತಿರುವ ಬಿಜೆಪಿ, ಈಗ ಭಾಷೆಯನ್ನೂ ಟೂಲ್ ಕಿಟ್ ಮಾಡಿಕೊಂಡು ವಿಭಜನೆಗೆ ಹೊರಟಿರುವುದು ದೇಶಕ್ಕೆ ಗಂಡಾಂತರಕಾರಿ ಎಂದು ಅವರು ದೂರಿದ್ದಾರೆ.

ಈ ಹಿಂದೆ ಬ್ರಿಟಿಷರು ಪ್ರತಿ ಸಂಸ್ಥಾನವನ್ನು ಅಕ್ರಮಿಸಿಕೊಳ್ಳುವ ಮುನ್ನ ಒಡೆದು ಆಳುವ ನೀತಿ ಅನುಸರಿಸುತ್ತಿದ್ದರು. ಈಗ ಬಿಜೆಪಿ ಅದೇ ನೀತಿಯನ್ನು ಮುಂದುವರಿಸಿದ್ದು, ಬ್ರಿಟಿಷರಿಗೂ ಮತ್ತು ಬಿಜೆಪಿಗೆ ಯಾವುದೇ ವ್ಯತ್ಯಾಸವಿಲ್ಲ ಎನ್ನುವುದಕ್ಕೆ ಇದೇ ಜೀವಂತ ಸಾಕ್ಷಿ ಎಂದು ಅವರು ಮಾರ್ಮಿಕವಾಗಿ ನುಡಿದಿದ್ದಾರೆ.

ಅಮಿತ್ ಶಾ ಅವರಿಗೆ ಇಂಗ್ಲಿಷ್ ಬರಲ್ವಾ? ಅವರಿಗೆ ಪ್ರಾದೇಶಿಕ ಭಾಷೆಗಳ ಮೇಲೆ ಯಾಕೆ ಈ ಪರಿ ದ್ವೇಷ? ನಮ್ಮ ಭಾಷೆ ನಮಗೆ ಮುಖ್ಯ. ಮಾತೃಭಾಷೆಗೇ ಅಗ್ರಸ್ಥಾನ. ಕರ್ನಾಟಕದಲ್ಲಿ ಕನ್ನಡವೇ ಮೊದಲು. ಹಿಂದಿ ನಮ್ಮ ಭಾಷೆಯಲ್ಲ. ಹಿಂದಿ ಹೇರಿಕೆ ವಿರುದ್ಧ ಅಭಿಯಾನ ನನ್ನ ಪೂರ್ಣ ಬೆಂಬಲವಿದೆ ಎಂದು ತಿಳಿಸಿದ್ದಾರೆ.

Join Whatsapp
Exit mobile version