ಮಂಗಳೂರು: ಕೊರೊನಾ ನಿಯಂತ್ರಣಕ್ಕೆ ಬಿಗಿ ಕ್ರಮ| ಗಡಿ ಭಾಗದ ವೈನ್ ಶಾಪ್ ಗಳು ಕ್ಲೋಸ್

Prasthutha|

ಮಂಗಳೂರು: ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತಷ್ಟು ಕಠಿಣ ನಿಯಮಗಳ ಜಾರಿಗೆ ಮುಂದಾಗಿದೆ. ಗಡಿ ಭಾಗಕ್ಕೆ ಹೊಂದಿಕೊಂಡಿರುವ ಎಲ್ಲಾ ಮದ್ಯದಂಗಡಿಗಳನ್ನು ಆಗಸ್ಟ್ 3 ರಿಂದ ಆಗಸ್ಟ್ 15ರ ವರೆಗೆ ಮುಚ್ಚುವಂತೆ ಆದೇಶಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ತಿಳಿಸಿದ್ದಾರೆ.

- Advertisement -

ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಸಾರ್ವಜನಿಕರು ಮದ್ಯ ಸೇವನೆಗೆ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗಗಳ ಮದ್ಯದಂಗಡಿಗಳನ್ನೇ ಅವಲಂಬಿಸಿರುವುದರಿಂದ ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುವ ಸಾಧ್ಯತೆಗಳು ಇರುತ್ತದೆ.

ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಜಿಲ್ಲಾಧಿಕಾರಿಯವರು ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 34 ಹಾಗೂ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 (3) ಹಾಗೂ ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ಕಾಯ್ದೆ 1965 ನಿಯಮ 21(1) ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಕೇರಳ ರಾಜ್ಯದ ಗಡಿಭಾಗಕ್ಕೆ ಹೊಂದಿಕೊಂಡಿರುವ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ, ತಾಲೂಕು ಪ್ರದೇಶಗಳ 5 ಕಿ.ಮೀ. ವ್ಯಾಪ್ತಿಯಲ್ಲಿರುವ ಎಲ್ಲಾ ಮದ್ಯದಂಗಡಿಗಳನ್ನು 2021ರ ಆಗಸ್ಟ್ 3 ರಿಂದ 15 ರವರೆಗೆ ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ಆದೇಶ ಹೊರಡಿಸಿದ್ದಾರೆ.

- Advertisement -

ಈ ಆದೇಶವನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲಾ ಅಬಕಾರಿ ಉಪ ಆಯುಕ್ತರಿಗೆ ನಿರ್ದೇಶನ ನೀಡಲಾಗಿದ್ದು, ನಿಷೇಧಾಜ್ಞೆ ಜಾರಿಗೊಂಡಿರುವ ಸಮಯದಲ್ಲಿ ಆ ವ್ಯಾಪ್ತಿಗೊಳಪಟ್ಟ ವೈನ್‍ಶಾಪ್ ಅಥವಾ ಬಾರ್‍ ಗಳ ಮುಂದಿನ ಮತ್ತು ಹಿಂದಿನ ಬಾಗಿಲುಗಳಿಗೆ ಅಬಕಾರಿ ಇಲಾಖೆಯ ಮೊಹರು (ಸೀಲು) ಗಳನ್ನು ಹಾಕಿ ಕಡ್ಡಾಯವಾಗಿ ಮುಚ್ಚುವಂತೆ ನೋಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

Join Whatsapp