ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಯುವ ಮೋರ್ಚಾ ನಾಯಕನನ್ನು ಗುಂಡಿಕ್ಕಿ ಹತ್ಯೆಗೈಯ್ಯಲಾಗಿದೆ.
ಗುಂಡೇಟಿನಿಂದ ಮೃತಪಟ್ಟ ವ್ಯಕ್ತಿಯನ್ನು ಉತ್ತರ ದಿನಾಜ್ ಪುರ್ ಜಿಲ್ಲೆಯ ಇಟಹಾರ್ ಮೂಲದವರಾದ ಮಿಥುನ್ ಘೋಷ್ ಎಂದು ಗುರುತಿಸಲಾಗಿದೆ. ಮಿಥುನ್ ಘೋಷ್ ತನ್ನ ಮನೆಯ ಮುಂದೆ ನಿಂತಿದ್ದಾಗ ದ್ವಿಚಕ್ರವಾಹನದಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.
ಗುಂಡೇಟಿನಿಂದ ಕುಸಿದು ಬಿದ್ದ ಅವರನ್ನು ರಾಯಗಂಜ್‌ನ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.
ಘೋಷ್ ಹತ್ಯೆಯಿಂದ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಿದೆ ಎಂದು ವರದಿಯಾಗಿದೆ.