Home ಟಾಪ್ ಸುದ್ದಿಗಳು ವಕ್ಫ್ ಆಸ್ತಿ ಒತ್ತುವರಿ ವರದಿಗೆ ಗಡುವು ನೀಡಿದ ಝಮೀರ್ ಅಹಮದ್

ವಕ್ಫ್ ಆಸ್ತಿ ಒತ್ತುವರಿ ವರದಿಗೆ ಗಡುವು ನೀಡಿದ ಝಮೀರ್ ಅಹಮದ್

ಬೆಂಗಳೂರು: ರಾಜ್ಯದಲ್ಲಿ ವಕ್ಫ್ ಆಸ್ತಿ ಒತ್ತುವರಿಗೆ ಸಂಬಂಧಿಸಿ ಅಲ್ಪಸಂಖ್ಯಾಕರ ಕಲ್ಯಾಣ ಮತ್ತು ವಕ್ಫ್ ಸಚಿವ ಝಮೀರ್‌ ಅಹಮದ್‌ ಖಾನ್‌ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಗಡುವು ನೀಡಿದ್ದು, ತಿಂಗಳಲ್ಲಿ ಸಮಗ್ರ ವರದಿ ಸಲ್ಲಿಸುವಂತೆ ಆದೇಶಿಸಿದ್ದಾರೆ.

ಅಲ್ಪಸಂಖ್ಯಾಕರ ಕಲ್ಯಾಣ ನಿರ್ದೇಶನಾಲಯದಲ್ಲಿ ಜಿಲ್ಲಾ ವಕ್ಫ್ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ಜಿಲ್ಲಾವಾರು ವಕ್ಫ್ ಆಸ್ತಿಗಳ ಒತ್ತುವರಿ, ನ್ಯಾಯಾಲಯದಲ್ಲಿರುವ ಪ್ರಕರಣ ಸಹಿತ ಸಮಗ್ರ ಮಾಹಿತಿಯನ್ನು ಅಧಿಕಾರಿಗಳು ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ.

ಜಿಲ್ಲೆಗಳಲ್ಲಿ ಕೆಲವು ಅಧಿಕಾರಿಗಳು ನ್ಯಾಯಾಲಯದಲ್ಲಿರುವ ಪ್ರಕರಣಗಳ ಬಗ್ಗೆ ಅಧ್ಯಯನ ನಡೆಸದೆ ನ್ಯಾಯಾಲಯಕ್ಕೆ ಹಾಜರಾಗದೆ ಪರೋಕ್ಷವಾಗಿ ಒತ್ತುವರಿದಾರರ ಜತೆ ಶಾಮೀಲಾಗಿರುವ ಬಗ್ಗೆ ಮಾಹಿತಿ ಇದೆ ಎಂದು ಸಚಿವರು ಹೇಳಿದ್ದಾರೆ. ಈ ವರ್ತನೆ ಸರಿಪಡಿಸಿಕೊಳ್ಳದಿದ್ದರೆ ಕಠಿನ ಕ್ರಮ ಕೈಗೊಳ್ಳಲಾಗುವುದು. ಹಣ ಮಾಡಲು ಇಲ್ಲಿಗೆ ಬರಬಾರದು. ಆರೋಪ ಕೇಳಿಬಂದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ತೀಕ್ಷ್ಣವಾಗಿ ಎಚ್ಚರ ನೀಡಿದ್ದಾರೆ.

ವಕ್ಫ್ ಅಸ್ತಿಗಳ ರಕ್ಷಣೆಗೆ ಕಾಂಪೌಂಡ್‌ ನಿರ್ಮಿಸಲು ಅಗತ್ಯ ಇರುವ ಕಡೆ ಪ್ರಸ್ತಾವನೆ ಸಲ್ಲಿಸಿ. ವಕ್ಫ್ ಆಸ್ತಿ ಎಂದು ಗುರುತಿಸುವಂತಾಗಲು ಏಕರೂಪದ ಕಾಂಪೌಂಡ್‌ ಹಾಕಬೇಕು ಎಂದೂ ಸೂಚನೆ ನೀಡಿದ್ದಾರೆ.

ಖಾಸಗಿ ಸಂಸ್ಥೆಯಿಂದಲೂ ಪ್ರತ್ಯೇಕ ಸಮೀಕ್ಷೆ ನಡೆಸಲಾಗುತ್ತಿದೆ. ಅಧಿಕಾರಿಗಳು ನೀಡುವ ವರದಿ, ಖಾಸಗಿ ಸಂಸ್ಥೆಯ ಮಾಹಿತಿ ತಾಳೆ ಆಗಬೇಕು. ಒಂದೊಮ್ಮೆ ತಾಳೆ ಆಗದಿದ್ದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದೂ ಎಚ್ಚರಿಸಿದ ಝಮೀರ್, ಪ್ರತಿ ಜಿಲ್ಲಾ ಹಾಗೂ ತಾಲೂಕುಗಳ ಸಮಗ್ರ ವರದಿ ಒಂದು ತಿಂಗಳಲ್ಲಿ ಸಲ್ಲಿಸಬೇಕು ಎಂದು ಗಡುವು ನೀಡಿದ್ದಾರೆ.


ಇಲಾಖೆ ಕಾರ್ಯದರ್ಶಿ ಮನೋಜ್‌ ಜೈನ್‌, ವಕ್ಫ್ ಮಂಡಳಿ ಅಧ್ಯಕ್ಷ ಅನ್ವರ್‌ ಬಾಷಾ, ನಿರ್ದೇಶಕ ಮೊಕಾಶಿ ಜಿಲಾನಿ ಉಪಸ್ಥಿತರಿದ್ದರು.

Join Whatsapp
Exit mobile version